ಟುಡೇ ಹಾಸನ ನ್ಯೂಸ್ ವರದಿ
ಹಾಸನ ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೬ ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮವು ಅ.21 ರಿಂದ ನ.20 ರವರಿಗೆ ನಡೆಯಲಿದ್ದು, ಯಾವುದೇ ಜಾನುವಾರುಗಳಿಗೆ ಲಸಿಕೆ ಹಾಕುವುದು ತಪ್ಪದಂತೆ ನಿಗಾ ವಹಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಸಿಕಾ ಅಭಿಯಾನ ಕುರಿತು ನಡೆದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವರ್ಷದಲ್ಲಿ ಎರಡು ಬಾರಿ ನಡೆಯುವ ಈ ಕಾರ್ಯಕ್ರಮದಲ್ಲಿ ರೈತಾಪಿ ವರ್ಗದವರು ಕೂಡ ಜವಾಬ್ದಾರಿ ವಹಿಸಿ ಲಸಿಕೆ ಹಾಕಿಸಲು ಅರಿವು ಮೂಡಿಸುವಂತೆ ತಿಳಿಸಿದರು.
ಕಳೆದ ಬಾರಿ ಶೇ.99.6 ಸಾಧನೆ ಮಾಡಿದ್ದೀರಿ ಆದರೆ ಉಳಿದ ಜಾನುವಾರುಗಳಿಗೂ ಲಸಿಕೆ ಹಾಕಿ ಶೇ.೧೦೦ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನ ಪಡೆಯಬೇಕು. ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಪರಿಣಾಮವಾಗಿ ಅನುಷ್ಟಾನ ಮಾಡಲು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆಯೇ ಎಂಬುದನ್ನು ಗುರುತಿಸಲು ಏನಾದರೂ ಚಿಹ್ನೆ ಇರುವಂತೆ ಕ್ರಮವಹಿಸಲು ತಿಳಿಸಿದ ಜಿಲ್ಲಾಧಿಕಾರಿ ಅವರು ಕಾಲುಬಾಯಿ ರೋಗ ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪಲ್ಪ್ ಪೊಲೀಯೊ ರೀತಿ ಈ ಲಸಿಕಾ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ನೀಡಿ ಯಶಸ್ವಿಗೊಳಿಸಿ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಡಾ.ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.